Krishnam Pranaya Sakhi: ತ್ರಿಶೂಲ್ ಎಂಟರ್ಟೈನ್ಮೆಂಟ್ ಲಾಂಛನದಲ್ಲಿ ಪ್ರಶಾಂತ್ ಜಿ ರುದ್ರಪ್ಪ ನಿರ್ಮಿಸಿರುವ, ಶ್ರೀನಿವಾಸರಾಜು ನಿರ್ದೇಶನದ ಹಾಗೂ ಗೋಲ್ಡನ್ ಸ್ಟಾರ್ ಗಣೇಶ್(Golden Star Ganesh)ನಾಯಕರಾಗಿ ನಟಿಸಿರುವ ‘ಕೃಷ್ಣಂ ಪ್ರಣಯ ಸಖಿ’(Krishnam Pranaya Sakhi) ಚಿತ್ರದ “ಚಿನ್ನಮ್ಮ” ಹಾಡು ಇತ್ತೀಚಿಗೆ ಮಂತ್ರಿ ಮಾಲ್ ನಲ್ಲಿ ಸಾವಿರಾರು ಅಭಿಮಾನಿಗಳ ಸಮ್ಮುಖದಲ್ಲಿ ಅದ್ದೂರಿಯಾಗಿ ಬಿಡುಗಡೆಯಾಯಿತು. ಬಹು ನಿರೀಕ್ಷಿತ ಈ ಚಿತ್ರ ಆಗಸ್ಟ್ 15 ರಂದು ರಾಜ್ಯಾದ್ಯಂತ ತೆರೆ ಕಾಣಲಿದೆ. ಸುಪ್ರೀಂ ಹೀರೋ ಶಶಿಕುಮಾರ್ ಈ ಹಾಡನ್ನು ಬಿಡುಗಡೆ ಮಾಡಿ ಚಿತ್ರತಂಡಕ್ಕೆ ಶುಭ ಕೋರಿದರು. ಚಿತ್ರದ ಪ್ರಮುಖ ಪಾತ್ರದಲ್ಲಿ ಶಶಿಕುಮಾರ್ ಅಭಿನಯಿಸಿದ್ದಾರೆ.
ನಮ್ಮ ಚಿತ್ರದಲ್ಲಿ ಅರ್ಜುನ್ ಜನ್ಯ ಅವರು ಸಂಗೀತ ಸಂಯೋಜಿಸಿರುವ ಒಟ್ಟು ಏಳು ಹಾಡುಗಳಿದೆ. ಆ ಪೈಕಿ ಎರಡನೇ ಹಾಡು ಇಂದು ಬಿಡುಗಡೆಯಾಗಿದೆ. ಮೈಸೂರಿನಲ್ಲಿ ಬಿಡುಗಡೆಯಾದ ಮೊದಲ ಹಾಡಿಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿ, ಅಧಿಕ ಸಂಖ್ಯೆಯಲ್ಲಿ ವೀಕ್ಷಣೆಯಾಗುತ್ತಿದೆ. ಈ “ಚಿನ್ನಮ್ಮ” ಹಾಡು ಕೂಡ ಎಲ್ಲರಿಗೂ ಪ್ರಿಯವಾಗಲಿದೆ ಎಂದು ನಿರ್ದೇಶಕ ಶ್ರೀನಿವಾಸರಾಜು ತಿಳಿಸಿದರು.
ನಾನು ಬಹಳ ಇಷ್ಟಪಡುವ ಗೀತರಚನೆಕಾರರಾದ ಕವಿರಾಜ್ ಅವರು ಬರೆದಿರುವ “ಚಿನ್ನಮ್ಮ” ಹಾಡು ತುಂಬಾ ಚೆನ್ನಾಗಿದೆ. ಅರ್ಜುನ್ ಜನ್ಯ ಅವರ ಸಂಗೀತ, ಕೈಲಾಶ್ ಖೇರ್ ಹಾಗೂ ಇಂದು ನಾಗರಾಜ್ ಅವರ ಗಾಯನ ಮತ್ತು ಶೇಖರ್ ಮಾಸ್ಟರ್ ಅವರ ನೃತ್ಯ ನಿರ್ದೇಶನ ಹಾಗೂ ವೆಂಕಟ್ ರಾಮಪ್ರಸಾದ್ ಅವರ ಛಾಯಾಗ್ರಹಣ ಎಲ್ಲವೂ ಸೊಗಸಾಗಿದೆ. ಈ ಹಾಡು ಚಿತ್ರೀಕರಣವಾದ ಜಾಗ ಕೂಡ ಅದ್ಭುತವಾಗಿದೆ. ಈ ಚಿತ್ರದಲ್ಲಿ ಹಿರಿಯ ನಟ ಶಶಿಕುಮಾರ್ ಅವರ ಜೊತೆ ನಟಿಸಿದ್ದು ಖುಷಿಯಾಗಿದೆ ಎಂದರು ಗೋಲ್ಡನ್ ಸ್ಟಾರ್ ಗಣೇಶ್(Golden Star Ganesh).
ಬಹು ನಿರೀಕ್ಷಿತ ‘ಕೃಷ್ಣಂ ಪ್ರಣಯ ಸಖಿ’(Krishnam Pranaya Sakhi) ಗೋಲ್ಡನ್ ಸ್ಟಾರ್ ಗಣೇಶ್ ಅಭಿನಯದ 41ನೇ ಚಿತ್ರ. ಗಣೇಶ್ ಅವರಿಗೆ ನಾಯಕಿಯಾಗಿ ಮಾಳವಿಕ ನಾಯರ್ ನಟಿಸಿದ್ದಾರೆ. ಶರಣ್ಯ ಶೆಟ್ಟಿ, ಶ್ರೀನಿವಾಸಮೂರ್ತಿ, ಸಾಧುಕೋಕಿಲ, ರಂಗಾಯಣ ರಘು, ಶಶಿಕುಮಾರ್, ಶ್ರುತಿ, ಭಾವನ, ಅಶೋಕ್, ರಾಮಕೃಷ್ಣ, ಶಿವಧ್ವಜ್, ರಘುರಾಮ್, ಮಾನಸಿ ಸುಧೀರ್, ಅಂಬುಜ, ಗಿರಿ ಶಿವಣ್ಣ ಮುಂತಾದವರು ತಾರಾಬಳಗದಲ್ಲಿದ್ದಾರೆ.