ಹಿರಿಯ ನಟ ರಾಘವೇಂದ್ರ ರಾಜಕುಮಾರ್ ಹಾಗೂ ನಟಿ ಶ್ರುತಿ ಮುಖ್ಯಭೂಮಿಕೆಯಲ್ಲಿ ಅಭಿನಯಿಸಿರುವ ‘13’ ಸಿನಿಮಾದ ಬಿಡುಗಡೆಗೆ ದಿನಾಂಕ ನಿಗದಿಯಾಗಿದೆ. ಈಗಾಗಲೇ ಸಿನಿಮಾದ ಪ್ರಚಾರ ಕಾರ್ಯಗಳಲ್ಲಿ ನಿರತವಾಗಿಕುವ ಚಿತ್ರತಂಡ, ಇದೇ ಸೆಪ್ಟೆಂಬರ್ 15ರಂದು ‘13’ ಸಿನಿಮಾವನ್ನು ಬಿಡುಗಡೆ ಮಾಡಿ ತೆರೆಗೆ ತರುವ ಯೋಜನೆ ಹಾಕಿಕೊಂಡಿದೆ.
ಈ ಹಿಂದೆ ‘ಪಲ್ಲಕ್ಕಿ’ ಸಿನಿಮಾವನ್ನು ನಿರ್ದೇಶಿಸಿದ್ದ ಕೆ. ನರೇಂದ್ರಬಾಬು ನಿರ್ದೇಶನದಲ್ಲಿ ಮೂಡಿಬಂದಿರುವ ‘13’ ಸಿನಿಮಾದಲ್ಲಿ ರಾಘವೇಂದ್ರ ರಾಜಕುಮಾರ್ ನಿವೃತ್ತ ಸೈನಿಕ ಹಾಗೂ ಗುಜರಿ ಅಂಗಡಿ ಮಾಲೀಕ ಮೋಹನ್ ಕುಮಾರ್ ಪಾತ್ರದಲ್ಲಿ ಮತ್ತು ನಾಯಕ ನಟಿ ಶ್ರುತಿ ಟೀ ಅಂಗಡಿ ನಡೆಸುವ ಸಾಯಿರಾಬಾನು ಎಂಬ ಮುಸ್ಲಿಂ ಮಹಿಳೆಯ ಪಾತ್ರದಲ್ಲಿ ಶ್ರುತಿ ನಟಿಸಿದ್ದಾರೆ. ಉಳಿದಂತೆ ನಟ ಪ್ರಮೋದ್ ಶೆಟ್ಟಿ ಪೊಲೀಸ್ ಅಧಿಕಾರಿ ಪಾತ್ರದಲ್ಲಿ ಅಭಿನಯಿಸಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯ ಭಾಗದಲ್ಲಿ ನಡದೆ ಒಂದು ನೈಜ ಘಟನೆಯನ್ನು ಸ್ಫೂರ್ತಿಯಾಗಿಟ್ಟುಕೊಂಡು ನಿರ್ದೇಶಕರು ಈ ಚಿತ್ರಕಥೆಯನ್ನು ಹೆಣೆದಿದ್ದಾರೆ. ‘ಯುವಿ ಪ್ರೊಡಕ್ಷನ್’ ಅಡಿಯಲ್ಲಿ ಕೆ. ಸಂಪತ್ ಕುಮಾರ್, ಹೆಚ್.ಎಸ್. ಮಂಜುನಾಥ್, ಮಂಜುನಾಥ ಗೌಡ ಹಾಗೂ ಸಿ. ಕೇಶವಮೂರ್ತಿ ಜಂಟಿಯಾಗಿ ಈ ಚಿತ್ರವನ್ನು ನಿರ್ಮಿಸಿದ್ದಾರೆ. ಸಸ್ಪೆನ್ಸ್-ಥ್ರಿಲ್ಲರ್ ಶೈಲಿಯ ‘13’ ಚಿತ್ರಕ್ಕೆ ಪ್ರಾದೇಶಿಕ ಸೆನ್ಸಾರ್ ಮಂಡಳಿ ಚಿತ್ರಕ್ಕೆ ಯು/ಎ ಪ್ರಮಾಣಪತ್ರ ನೀಡಿದ್ದು, ಸಿನಿಮಾ ಹೇಗಿದೆ ಎಂಬುದು ಸೆ. 15ಕ್ಕೆ ಗೊತ್ತಾಗಲಿದೆ.