ಸಿಂಪಲ್ ಸ್ಟಾರ್ ರಕ್ಷಿತ್ ಶೆಟ್ಟಿ ನಾಯಕರಾಗಿ ನಟಿಸಿ, ನಿರ್ಮಾಣ ಮಾಡಿರುವ ‘ಸಪ್ತ ಸಾಗರದಾಚೆ ಎಲ್ಲೋ’ ಸಿನಿಮಾ ತೆರೆಗೆ ಬರಲು ರೆಡಿಯಾಗಿದೆ. ಸದ್ಯ ‘ಸಪ್ತ ಸಾಗರದಾಚೆ ಎಲ್ಲೋ’ ಸಿನಿಮಾದ ಪ್ರಚಾರ ಕಾರ್ಯಗಳಲ್ಲಿ ನಿರತವಾಗಿರುವ ಚಿತ್ರತಂಡ ಇದೀಗ ಸಿನಿಮಾದ ಟೈಟಲ್ ಟ್ರ್ಯಾಕ್ ಬಿಡುಗಡೆ ಮಾಡಿದೆ.
ಚರಣ್ ರಾಜ್ ಸಂಗೀತ ಸಂಯೋಜನೆಯಲ್ಲಿ ಮೂಡಿಬಂದಿರುವ ‘ಸಪ್ತ ಸಾಗರದಾಚೆ ಎಲ್ಲೋ’ ಸಿನಿಮಾದ ಟೈಟಲ್ ಟ್ರ್ಯಾಕಿಗೆ ಧನಂಜಯ್ ರಂಜನ್ ಸಾಹಿತ್ಯವಿದ್ದು, ಕಪಿಲ್ ಕಪಿಲನ್ ಹಾಡಿಗೆ ಧ್ವನಿಯಾಗಿದ್ದಾರೆ. ಸದ್ಯ ಬಿಡುಗಡೆಯಾಗಿರುವ ಈ ಮೆಲೋಡಿ ಹಾಡು ಸೋಶಿಯಲ್ ಮೀಡಿಯಾಗಳಲ್ಲಿ ಕೇಳುಗರ ಗಮನ ಸೆಳೆಯುತ್ತಿದೆ. ಯು-ಟ್ಯೂಬ್ ನಲ್ಲೂ ಹಾಡು ಬಿಡುಗಡೆಯಾದ ಕ್ಷಣದಿಂದಲೇ ಅಧಿಕ ಸಂಖ್ಯೆಯಲ್ಲಿ ವೀಕ್ಷಣೆಯಾಗುತ್ತಿದೆ.
ಹೇಮಂತ್ ಎಂ. ರಾವ್ ನಿರ್ದೇಶನದಲ್ಲಿ ಮೂಡಿಬಂದಿರುವ ‘ಸಪ್ತ ಸಾಗರದಾಚೆ ಎಲ್ಲೋ’ ಸಿನಿಮಾದಲ್ಲಿ ರಕ್ಷಿತ್ ಶೆಟ್ಟಿ ಅವರಿಗೆ ರುಕ್ಮಿಣಿ ವಸಂತ್, ಚೈತ್ರಾ ಜೆ ಆಚಾರ್ ನಾಯಕಿಯರಾಗಿ ಕಾಣಿಸಿಕೊಂಡಿದ್ದಾರೆ. ಉಳಿದಂತೆ ಅವಿನಾಶ್, ಶರತ್ ಲೋಹಿತಾಶ್ವ, ಅಚ್ಯತಕುಮಾರ್, ಪವಿತ್ರ ಲೋಕೇಶ್, ರಮೇಶ್ ಇಂದಿರಾ, ಗೋಪಾಲಕೃಷ್ಣ ದೇಶಪಾಂಡೆ ಮುಂತಾದವರು ಸಿನಿಮಾದ ಇತರ ಪ್ರಮುಖ ಪಾತ್ರಗಳಲ್ಲಿ ಅಭಿನಯಿಸಿದ್ದಾರೆ. ಚಿತ್ರಕ್ಕೆ ಅದ್ವೈತ ಗುರುಮೂರ್ತಿ ಛಾಯಾಗ್ರಹಣ ಹಾಗೂ ಸುನೀಲ್ ಭಾರದ್ವಾಜ್ ಸಂಕಲನವಿದೆ.
ಇನ್ನು ‘ಸಪ್ತ ಸಾಗರದಾಚೆ ಎಲ್ಲೋ’ ಎರಡು ಭಾಗಗಳಲ್ಲಿ ಬಿಡುಗಡೆಯಾಗುತ್ತಿದೆ. ‘ಸಪ್ತ ಸಾಗರದಾಚೆ ಎಲ್ಲೋ’ ಚಿತ್ರದ ಸೈಡ್ 1 ಸೆಪ್ಟೆಂಬರ್ 1 ರಂದು ಬಿಡುಗಡೆಯಾಗಲಿದ್ದು, ‘ಸಪ್ತ ಸಾಗರದಾಚೆ ಎಲ್ಲೋ’ ಸೈಡ್ 2 ಅಕ್ಟೋಬರ್ 20ಕ್ಕೆ ತೆರೆ ಕಾಣಲಿದೆ.